ಕುಂಬಳೆ: ಬಂದ್ಯೋಡು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿದ ಆಂಬ್ಯುಲೆನ್ಸ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಓರ್ವ ಮೃತಪಟ್ಟ ಘಟನೆ ನಡೆದಿದೆ.. ಆಂಬ್ಯುಲೆನ್ಸ್‌ನಲ್ಲಿದ್ದ ರೋಗಿ ಮೃತಪಟ್ಟವರಾಗಿದ್ದು, ನಾಲ್ವರಿಗೆ ಗಾಯಗಳಾಗಿವೆ. ಬಂದ್ಯೋಡು ಅಡ್ಕ ನಿವಾಸಿ ಅಶೋಕ(41) ಮೃತಪಟ್ಟವರು. ಅವರ ಪತ್ನಿ ಪ್ರತಿಭಾ, ಸಹೋದರ ರಾಜೇಶ್, ರಾಜೇಶ್ ಅವರ ಪತ್ನಿ ಹಾಗೂ ಆಂಬ್ಯುಲೆನ್ಸ್ ಚಾಲಕ ಗಾಯಗೊಂಡಿದ್ದು, ಇವರನ್ನು ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿನ್ನೆ (ಮಂಗಳವಾರ) ರಾತ್ರಿ 11 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಅಶೋಕ್ ಉಪ್ಪಳದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಕಾಸರಗೋಡಿನ ಆಸ್ಪತ್ರೆಗೆ ಆಂಬ್ಯುಲೆನ್ಸ್‌ನಲ್ಲಿ ಕರೆದೊಯ್ಯುತ್ತಿದ್ದಾಗ ಆಂಬ್ಯುಲೆನ್ಸ್ ಅಪಘಾತಕ್ಕೀಡಾಗಿದೆ.
ಗಂಭೀರವಾಗಿ ಗಾಯಗೊಂಡ ಅಶೋಕ್ ಅವರನ್ನು ಮೊದಲು ಉಪ್ಪಳದ ಆಸ್ಪತ್ರೆಗೆ ದಾಖಲಿಸಿ, ಬಳಿಕ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅಶೋಕ್ ಅವರಿಗೆ ತನೂಷ್ ಎಂಬ ಏಕೈಕ ಪುತ್ರನಿದ್ದಾನೆ. ಅಶೋಕ ಅವರು ಕೆ.ಎಸ್.ಇ.ಬಿ ಗುತ್ತೆಗೆದಾರರಾಗಿದ್ದರು.
